ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವೇಳೆ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಈಗಾಗಲೇ ಝಡ್ ಪ್ಲಸ್ (Z+) ಭದ್ರತೆಯಲ್ಲಿರುವ ಅವರ ದೆಹಲಿಯ ಹೊಸ ಮೋತಿ ಬಾಗ್ ನಿವಾಸ ಹಾಗೂ ಚುನಾವಣಾ ಆಯೋಗದ ಕಚೇರಿಗೆ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯ ಹೆಚ್ಚುವರಿ ಮೀಸಲು ಸಿಬ್ಬಂದಿಯನ್ನು ಗ್ಯಾನೇಶ್ ಕುಮಾರ್ ಅವರ ನಿವಾಸ, ಚುನಾವಣಾ ಆಯೋಗದ ಕಚೇರಿ ಮತ್ತು ವೈಯಕ್ತಿಕ ಭದ್ರತಾ ವ್ಯವಸ್ಥೆಯಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಭದ್ರತಾ ವರ್ಗವನ್ನು ಮೇಲ್ದರ್ಜೆಗೆ ಏರಿಸಲಾಗಿಲ್ಲ. ಬದಲಾಗಿ, ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಒಕ್ಕೂಟ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಹಿರಿಯ ವಿರೋಧ ಪಕ್ಷದ ನಾಯಕರು ಚುನಾವಣಾ ಆಯೋಗದ ವಿರುದ್ಧ ಆರೋಪಗಳನ್ನು ಮಾಡಿದ್ದು, ಆಯೋಗವು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಟೀಕಿಸಿದ್ದಾರೆ.