ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ಕಾರಿನ ಮೇಲೆ ದಾಳಿ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಕೋಲ್ಕತ್ತಾ ಸಮೀಪದ ಹಾಲಿಶಹಾರ್ನಲ್ಲಿ ಪಕ್ಷದ ಕಾರ್ಯಕರ್ತರೊಬ್ಬರ ಕುಟುಂಬವನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ಮಮತಾ ಬ್ಯಾನರ್ಜಿ ಅವರ ಕಾರನ್ನು ಕೆಲವರು ಸುತ್ತುವರಿದು ಕಲ್ಲು, ಇಟ್ಟಿಗೆ, ಚಪ್ಪಲಿ ಹಾಗೂ ನೀರಿನ ಬಾಟಲಿಗಳನ್ನು ಎಸೆದಿದ್ದಾರೆ ಎಂದು ವರದಿಯಾಗಿದೆ. ಘಟನೆಯ ವೇಳೆ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ಕಾರಿನ ಕಿಟಕಿಗಳು ತೆರೆದಿದ್ದರೆ ಕಲ್ಲು ಅಥವಾ ಇಟ್ಟಿಗೆ ಬಡಿದು ತಮಗೆ ಗಂಭೀರ ಗಾಯವಾಗಬಹುದಿತ್ತು. ‘ನಾನು ಸಾಯಬಹುದಿತ್ತು’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ತಮ್ಮ ಭದ್ರತೆಯಲ್ಲಿದ್ದ ಪೊಲೀಸರ ಕಾರ್ಯವೈಖರಿಯ ಬಗ್ಗೆಯೂ ಮಮತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದು, ತಪ್ಪಿತಸ್ಥರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಘಟನೆ ಇದೀಗ ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ದಾಳಿಯ ಆರೋಪದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಘಟನೆಯ ಹಿಂದಿರುವವರ ಬಗ್ಗೆ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.