Search


ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ನಿಲ್ಲಿಸಿ: ಪೊಲೀಸರಿಗೆ ಯಡಿಯೂರಪ್ಪ ಖಡಕ್‌ ಎಚ್ಚರಿಕೆ

ಬೆಂಗಳೂರು: ಎಸ್‌ಐಆರ್‌ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ಕಾನೂನು ಕ್ರಮ ಕೈಗೊಳ್ಳುವುದು ಅಥವಾ ಕಿರುಕುಳ ನೀಡುವುದನ್ನು ಮುಂದುವರಿಸಿದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು. ಎಸ್‌ಐಆರ್‌ ಸಂದರ್ಭದಲ್ಲಿ ಸಲ್ಲಿಸಲಾದ ನಮೂನೆ 7 ಅರ್ಜಿಗಳಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕ್ರಿಯೆಗಳನ್ನು ಕಾನೂನುಬದ್ಧವಾಗಿ ನಡೆಸಬೇಕು ಎಂದು ಆಗ್ರಹಿಸಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರಿಗೆ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದ ಯಡಿಯೂರಪ್ಪ, ಯಾವುದೇ ಕಾರಣಕ್ಕೂ ಬಿಜೆಪಿ ಕಾರ್ಯಕರ್ತರ ವಿರುದ್ಧ ಅನಗತ್ಯ ಕಾನೂನು ಕ್ರಮ ಕೈಗೊಳ್ಳಬಾರದು ಎಂದು ಹೇಳಿದರು. ಕಾರ್ಯಕರ್ತರನ್ನು ಬಂಧಿಸುವುದು, ಅವರಿಗೆ ಕಿರುಕುಳ ನೀಡುವುದು ಅಥವಾ ಹಲ್ಲೆ ನಡೆಸುವಂತಹ ಘಟನೆಗಳು ನಡೆಯಬಾರದು. ಇಂತಹ ಕ್ರಮಗಳು ಮುಂದುವರಿದರೆ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.

ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಜವಾಬ್ದಾರಿಯಾಗಿದ್ದು, ರಾಷ್ಟ್ರೀಯ ಪಕ್ಷವಾಗಿ ಬಿಜೆಪಿ ಕೂಡ ತನ್ನ ಜವಾಬ್ದಾರಿಯನ್ನು ಅರಿತುಕೊಂಡು ನಡೆದುಕೊಳ್ಳುತ್ತಿದೆ ಎಂದು ಯಡಿಯೂರಪ್ಪ ಹೇಳಿದರು. ತಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಕೈಗೊಳ್ಳಲಾಗುತ್ತಿರುವ ಎಲ್ಲಾ ಕ್ರಮಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದ ಅವರು, ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಕಾನೂನು ಪ್ರಕಾರ ಕಾರ್ಯನಿರ್ವಹಿಸಬೇಕು ಎಂದರು.

ಚುನಾವಣಾ ಆಯೋಗದ ಕಚೇರಿಗೆ ತೆರಳಿ ಧರಣಿ ನಡೆಸಿದ ಮುಖ್ಯಮಂತ್ರಿ ವಿರುದ್ಧವೂ ಯಡಿಯೂರಪ್ಪ ಆಕ್ಷೇಪ ವ್ಯಕ್ತಪಡಿಸಿದರು. ಆಯುಕ್ತರಿಗೆ ಒತ್ತಡ ಹೇರುವ ಬದಲು ಕಾನೂನು ಪ್ರಕಾರ ನಡೆದುಕೊಳ್ಳಬೇಕು ಎಂದು ಹೇಳಿದ ಅವರು, ಈಗಾಗಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ ಎಂದರು. ಸರ್ಕಾರವನ್ನು ಮೆಚ್ಚಿಸಲು ಕೆಲಸ ಮಾಡುವ ಬದಲು ಪೊಲೀಸ್ ಅಧಿಕಾರಿಗಳು ಕಾನೂನು ಮತ್ತು ನಿಯಮಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಆಗ್ರಹಿಸಿದರು.

By Ravikumar - 03-10-2026


Ads in Post