ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಭೀಕರ ದುರಂತ ಸಂಭವಿಸಿದೆ. ಬಾಲಕರ ಪಿಜಿ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಐವರು ಮೃತಪಟ್ಟಿದ್ದಾರೆ. ಕಟ್ಟಡದಲ್ಲಿ ಹಲವಾರು ವಿದ್ಯಾರ್ಥಿಗಳು ವಾಸವಾಗಿದ್ದ ಹಿನ್ನೆಲೆಯಲ್ಲಿ ಇನ್ನೂ ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು, ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ಘಟನೆ ಕುರಿತು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ದೆಹಲಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಈ ದುರಂತ ಹೇಗೆ ಸಂಭವಿಸಿತು ಎಂಬುದನ್ನು ವಿವರಿಸುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ. ಒಂದು ದಿನದ ಹಿಂದಷ್ಟೇ ಪ್ರಧಾನಿ ಮೋದಿ ದೆಹಲಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದರು ಎಂದು ಉಲ್ಲೇಖಿಸಿರುವ ಅವರು, ಶಿಕ್ಷಣ ಸಂಸ್ಥೆಗಳ ಕಟ್ಟಡ ಹಾಗೂ ಮೂಲಸೌಕರ್ಯಗಳ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕೆಂದು ಆಗ್ರಹಿಸಿದ್ದಾರೆ.