ನವದೆಹಲಿ: ದೆಹಲಿಯ ಸತ್ಯನಿಕೇತನ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಭೀಕರ ದುರಂತ ಸಂಭವಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇದುವರೆಗೆ ಒಂಬತ್ತು ಮಂದಿಯನ್ನು ರಕ್ಷಿಸಲಾಗಿದೆ.
ಕಟ್ಟಡ ಕುಸಿತದ ಘಟನೆಗೆ ದೆಹಲಿ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ. ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ದುಃಖದಲ್ಲಿ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿರುವ ಅವರು, ಸ್ಥಳದಲ್ಲಿ ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಧಿಕಾರಿಗಳ ಮಾಹಿತಿ ಪ್ರಕಾರ, ಸುಮಾರು 75 ಹಾಸಿಗೆಗಳ ಸಾಮರ್ಥ್ಯ ಹೊಂದಿದ್ದ ಪೇಯಿಂಗ್ ಗೆಸ್ಟ್ ವಸತಿಯಾಗಿದ್ದ ಈ ಕಟ್ಟಡ ಮಧ್ಯಾಹ್ನ ಸುಮಾರು 1.30ಕ್ಕೆ ಕುಸಿದಿದೆ. ಕಟ್ಟಡ ಕುಸಿದ ವೇಳೆ ಕನಿಷ್ಠ 50 ವಿದ್ಯಾರ್ಥಿಗಳು ಒಳಗಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಕುಸಿದ ಕಟ್ಟಡವು 'ಹಾಸ್ಟೆಲ್ ಡೇಜ್' ಹೆಸರಿನ ಪುರುಷರ ಪಿಜಿ ಆಗಿತ್ತು ಎಂದು ತಿಳಿದುಬಂದಿದೆ. ಅವಶೇಷಗಳ ತೆರವು ಕಾರ್ಯ ಹಾಗೂ ಸಿಲುಕಿರುವವರ ರಕ್ಷಣೆಗೆ ತುರ್ತು ಸಿಬ್ಬಂದಿ ಮತ್ತು ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.