ಬೆಂಗಳೂರು: ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಸಮಗ್ರವಾಗಿ ಸುಧಾರಣೆಯಾದರೆ ಜನರು ಹೆಚ್ಚು ಜಾಗೃತರಾಗುತ್ತಾರೆ. ಆಗ ಅಂಧಭಕ್ತರ ಸೈನ್ಯ ಸಿಗುವುದಿಲ್ಲ ಎಂಬ ಆತಂಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ ಸಂಚಾಲಕ ಆಶುತೋಷ್ ರಾಂಕಾ ಆರೋಪಿಸಿದ್ದಾರೆ.
ರವಿವಾರ ನಗರದ ಲಾಂಗ್ಫೋರ್ಡ್ ರಸ್ತೆಯ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಗೌರಿ ಸ್ಮಾರಕ ಟ್ರಸ್ಟ್ ಆಯೋಜಿಸಿದ್ದ ‘ಗೌರಿ ದಿನ–ಜೆನ್ಝಿ ದಿನ’ ಉಪನ್ಯಾಸ ಮತ್ತು ಚರ್ಚಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಸಾಮಾಜಿಕ ಬದಲಾವಣೆಗೆ ಶಿಕ್ಷಣ ಸುಧಾರಣೆಯೇ ಪ್ರಮುಖ ಪರಿಹಾರವಾಗಿದ್ದು, ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಕೇಂದ್ರ ಸರ್ಕಾರವೇ ಅಡ್ಡಿಯಾಗುತ್ತಿದೆ ಎಂದು ಟೀಕಿಸಿದರು.
ಮುಂದಿನ ದಿನಗಳಲ್ಲಿ ಶಾಲೆ, ಕಾಲೇಜು ಹಾಗೂ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದು ಕಾಕ್ರೋಚ್ ಜನತಾ ಪಾರ್ಟಿಯ ಪ್ರಮುಖ ಧ್ಯೇಯವಾಗಿದೆ. ಶಿಕ್ಷಣದ ಜೊತೆಗೆ ನಿರುದ್ಯೋಗ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಹೋರಾಟ ರೂಪಿಸಲಾಗುವುದು. ಇದು ಜನಾಂದೋಲನವಾಗಬೇಕಿದ್ದು, ಸರ್ಕಾರ ಯಾವುದೇ ಪಕ್ಷದ್ದಾಗಿದ್ದರೂ ಕಾಲಕ್ಕೆ ತಕ್ಕಂತೆ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು ಎಂದು ಆಶುತೋಷ್ ರಾಂಕಾ ಹೇಳಿದರು.
ಸಂವಿಧಾನದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ಪ್ರತಿಪಾದಿಸಿದರು. ಇದೇ ವೇಳೆ ಎಸ್ಎಫ್ಐ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಐಶೆ ಘೋಷ್ ಮಾತನಾಡಿ, ಇಂದು ಸರ್ವಾಧಿಕಾರಿ ಧೋರಣೆಯಿಂದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಮತ್ತು ಶಿಕ್ಷಣ ಕ್ಷೇತ್ರದ ಖಾಸಗೀಕರಣವನ್ನು ವಿರೋಧಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, ಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.