ಬೆಂಗಳೂರು: ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳಿಗೆ ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನದ ಹಣವನ್ನು ಬೇರೆ ಇಲಾಖೆ ಹಾಗೂ ಯೋಜನೆಗಳಿಗೆ ಬಳಸಿರುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆಗೆ ಮೀಸಲಾದ ಹಣವನ್ನು ಬೇರೆ ಇಲಾಖೆಗಳು ಹಾಗೂ ವಿವಿಧ ಯೋಜನೆಗಳಿಗೆ ಬಳಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧವೂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದಂತೆ ಕೇಂದ್ರ ಸರ್ಕಾರವೂ ಕಾಯ್ದೆ ರೂಪಿಸಿ ಹಣವನ್ನು ಮೀಸಲಿಡಲಿ. ಕೇವಲ ಮಾತುಗಳಿಂದ ಪ್ರಯೋಜನವಿಲ್ಲ ಎಂದು ಅವರು ಹೇಳಿದ್ದಾರೆ.
SCSP-TSP ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂದು ಪ್ರತಿಪಕ್ಷಗಳು ಈ ಹಿಂದೆ ನಿರಂತರವಾಗಿ ಆರೋಪಿಸಿದ್ದವು. ಆದರೆ ಅಂದಿನ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಸೇರಿದಂತೆ ಸರ್ಕಾರದ ಹಲವು ಸಚಿವರು, ಗ್ಯಾರಂಟಿ ಸೇರಿದಂತೆ ಯಾವುದೇ ಯೋಜನೆಗಳಿಗೆ SCSP-TSP ಹಣ ಬಳಸುತ್ತಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.
ಆದರೆ ಇದೀಗ ಸ್ವತಃ ಡಿ.ಕೆ. ಶಿವಕುಮಾರ್ ಅವರೇ ಸಮಾಜ ಕಲ್ಯಾಣ ಇಲಾಖೆಯ ಹಣವನ್ನು ಬೇರೆ ಇಲಾಖೆ ಹಾಗೂ ಯೋಜನೆಗಳಿಗೆ ಬಳಸಿರುವುದಾಗಿ ಹೇಳಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಮೂಲಕ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಾಡಿದ್ದ ಆರೋಪಗಳಿಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ.