Search


ಚುನಾವಣಾ ರಾಜಕೀಯದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಹಿಂದೆ ಸರಿಯಲು ಕಾರಣವೇನು?

ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ನಿರ್ಧಾರದ ಹಿಂದಿನ ಕಾರಣಗಳನ್ನು ಬಹಿರಂಗಪಡಿಸಿದ್ದಾರೆ. 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಘೋಷಿಸಿರುವ ಅವರು, ಈ ನಿರ್ಧಾರಕ್ಕೆ ವಯಸ್ಸು, ಆರೋಗ್ಯ ಮತ್ತು ಇಂದಿನ ರಾಜಕೀಯದ ಪರಿಸ್ಥಿತಿಯೇ ಪ್ರಮುಖ ಕಾರಣ ಎಂದು ಹೇಳಿದ್ದಾರೆ.

ಕಳೆದ ತಿಂಗಳು ಸಿಎಂ ಸ್ಥಾನದಿಂದ ಕೆಳಗೆ ಇಳಿದಿದ್ದ ಸಿದ್ದರಾಮಯ್ಯ, ಹೈಕಮಾಂಡ್ ನೀಡಿದ್ದ ರಾಜ್ಯಸಭಾ ಸ್ಥಾನವನ್ನ ನಿರಾಕರಿಸಿದ್ದರು. ಆದರೆ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಎಲ್ಲಿಯೂ ಬಾಯಿ ಬಿಟ್ಟಿರಲಿಲ್ಲ. ಆದರೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, "ನನಗೆ ಈಗ 79 ವರ್ಷ. ಆರೋಗ್ಯ ಮತ್ತು ವಯಸ್ಸನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದೇನೆ. ಇಂದಿನ ರಾಜಕೀಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಆದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ" ಎಂದು ತಿಳಿಸಿದ್ದಾರೆ.

ಆದರೆ, ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಸಕ್ರಿಯ ರಾಜಕೀಯದಿಂದ ದೂರವಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಸಾರ್ವಜನಿಕ ಜೀವನದಲ್ಲಿ ತಮ್ಮ ಪಾತ್ರ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಇದೇ ವೇಳೆ, ಮುಂದಿನ ದಿನಗಳಲ್ಲಿ ವರುಣಾ ಕ್ಷೇತ್ರದಿಂದ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡುವ ಸಾಧ್ಯತೆಯೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯ ಅವರ ಈ ಘೋಷಣೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

By Ravikumar - 26-07-2026


Ads in Post