Search


ಯುವಕರನ್ನ ದೇಶದ್ರೋಹಿಗಳಂತೆ ನಡೆಸಿಕೊಳ್ಳುತ್ತಿದ್ದಾರೆ ; ಮೋದಿ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ

.ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಗಳ ನಡುವೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಮೋದಿ ಸರ್ಕಾರ ದೇಶದ ಭವಿಷ್ಯ ನಿರ್ಮಾತೃಗಳಂತೆ ಕಾಣುವ ಬದಲು, "ದೇಶದ ಶತ್ರುಗಳಂತೆ" ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರವು ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಆಲಿಸುವ ಬದಲು ಪೊಲೀಸ್ ಬಲವನ್ನು ಬಳಸುತ್ತಿದೆ ಎಂದು ಸೋನಿಯಾ ಗಾಂಧಿ ಟೀಕಿಸಿದ್ದು. ಶಿಕ್ಷಣ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಧ್ವನಿ ಎತ್ತುತ್ತಿರುವುದು ಪ್ರಜಾಪ್ರಭುತ್ವದ ಹಕ್ಕು. ಆದರೆ ಅವರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವನ್ನ ಕೇಂದ್ರ ಸರ್ಕಾರ ನಡೆಸುತ್ತಿದೆ ಎಂದು ಸೋನಿಯಾ ಗಾಂಧಿ ಟೀಕಿಸಿದ್ದಾರೆ. ಜೊತೆಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ಲಾಠಿಚಾರ್ಜ್, ಬಂಧನ ಹಾಗೂ ಬಲಪ್ರಯೋಗ ನಡೆಸಿರುವುದನ್ನು ಖಂಡಿಸಿದ ಅವರು, ಸರ್ಕಾರವು ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.

ದೇಶದ ಯುವಕರ ಭವಿಷ್ಯದೊಂದಿಗೆ ಆಟವಾಡುವ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತಡೆಯಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಸೋನಿಯಾ ಗಾಂಧಿ, ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಹಾಗೂ ಜವಾಬ್ದಾರಿತನ ತರಬೇಕೆಂದು ಆಗ್ರಹಿಸಿದರು. ಇದೇ ವೇಳೆ ಕಾಂಗ್ರೆಸ್ ಪಕ್ಷವು ವಿದ್ಯಾರ್ಥಿಗಳ ಹೋರಾಟಕ್ಕೆ ತನ್ನ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ವಿರುದ್ಧದ ಕಠಿಣ ಕ್ರಮಗಳನ್ನು ತಕ್ಷಣವೇ ನಿಲ್ಲಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಮತ್ತೊಂದೆಡೆ, ಕೇಂದ್ರ ಸರ್ಕಾರ ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಠಿಣ ಕಾನೂನು ಜಾರಿ, ಫಾಸ್ಟ್-ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿರುವುದಾಗಿ ಹೇಳಿದೆ. ಇದರ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಡಿಯೋವೊಂದನ್ನ ಹರಿಬಿಟ್ಟಿದ್ದು. ಪರಿಕ್ಷಾ ಸುಧಾರಣೆಯತ್ತ ಮಹತ್ವದ ಹೆಜ್ಜೆ ಇಡುವುದುದಾಗಿ ಹೇಳಿದ್ದರೆ. ಇನ್ನು ವಿದ್ಯಾರ್ಥಿಗಳ ಪರವಾಗಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಸೋನಂ ವಾಗಚುಕ್ ಕೂದ ತಮ್ಮ ನಿರಶನವನ್ನ ಅಂತ್ಯಗೊಳಿಸಿದ್ದಾರೆ.

By Ravikumar - 24-07-2026


Ads in Post